fbpx
Tamil Nadu

ಮೇಕೆದಾಟು ವಿವಾದ; ಕಾನೂನು ಹೋರಾಟಕ್ಕೆಮುಂದಾದ ತಮಿಳುನಾಡು

ಚೆನ್ನೈ: ಮೇಕೆದಾಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಯೋಜನೆಯನ್ನು ನಿಲ್ಲಿಸಲು ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಮಿಳುನಾಡಿನ ಲೋಕೋಪಯೋಗಿ ಸಚಿವ ಕೆ.ಪಳನಿಸ್ವಾಮಿ ನಿನ್ನೆ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಕಾವೇರಿ ನ್ಯಾಯಮಂಡಳಿಯ ಅಂತಿಮ ತೀರ್ಪು ಉಲ್ಲಂಘಿಸಿ ಕರ್ನಾಟಕ ಅಣೆಕಟ್ಟು ನಿರ್ಮಿಸಲು ಮುಂದಾದರೆ ತಮಿಳುನಾಡು ರಾಜ್ಯದ ಜನರ ಮತ್ತು ರೈತರ ಹಿತಾಸಕ್ತಿಯನ್ನು ಬಯಸಿ ಎಲ್ಲಾ ಕಾನೂನು ಸಮರ ನಡೆಸಲು ಸಿದ್ಧ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಣೆಕಟ್ಟನ್ನು 5 ಸಾವಿರದ 912 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಹೇಳಿದ್ದರು ಎಂದು ನಿನ್ನೆ ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ದುರೈ ಮುರುಗನ್ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿದರು.

ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಯೋಜನೆಯನ್ನು ತಡೆಗಟ್ಟಲು 2014ರಿಂದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕರ್ನಾಟಕ ಸರ್ಕಾರ ಮಾರ್ಚ್ 8ರಂದು ಸುಪ್ರೀಂ ಕೋರ್ಟ್ ಮುಂದೆ, ಕೋರ್ಟ್ ಗೆ ತಿಳಿಸದೆ ಯಾವುದೇ ಅಣೆಕಟ್ಟು ನಿರ್ಮಿಸುವ ಉದ್ದೇಶವಿಲ್ಲ ಎಂದು ಹೇಳಿತ್ತು. ಇದರ ಜೊತೆಗೆ ಮುಖ್ಯಮಂತ್ರಿ ಜಯಲಲಿತಾ ಈ ವಿಷಯವನ್ನು ಕೇಂದ್ರ ಸರ್ಕಾರದ ಬಳಿ ಕೊಂಡು ಹೋಗಿ ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಇಂದಿನ ಪ್ರಧಾನಿ ನರೇಂದ್ರ ಮೋದಿಯವರಿಗೂ ವಿವರಿಸಿದ್ದಾರೆ ಎಂದು ಹೇಳಿದ್ದರು. ಸುಪ್ರೀಂ ಕೋರ್ಟ್, ಬಾಕಿ ಅರ್ಜಿ ವಿಚಾರಣೆಯನ್ನು ಸದ್ಯದಲ್ಲಿಯೇ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂಬ ಆಶಾಭಾವನೆಯನ್ನು ಅವರು ವ್ಯಕ್ತಪಡಿಸಿದ್ದರು.

ನಾಳೆ ಮತ್ತು 25ರಂದು ತಮಿಳುನಾಡಿನಾದ್ಯಂತ ರೈತ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡಿ ಈ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ ಎಂದು ತಿಳಿಸಬೇಕು ಎಂದು ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top