ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಬಿಐ 20 ತಿಂಗಳ ನಂತರ ತನಿಖಾ ವರದಿ ಸಲ್ಲಿಸಿದೆ.
ಡಿ.ಕೆ ರವಿ ಅವರದ್ದು ಕೊಲೆಯಲ್ಲ, ಅದೊಂದು ಆತ್ಮಹತ್ಯೆ ಪ್ರಕರಣ ಎಂದು ತಿಳಿಸಿದೆ. ಈ ಸಂಬಂಧ ಸಿಬಿಐ ಅಧಿಕಾರಿಗಳು ಬುಧವಾರ ಬೆಂಗಳೂರು ದಕ್ಷಿಣ ವಿಭಾಗದ ಸಹಾಯಕ ಆಯುಕ್ತ ಟಿ.ಡಿ ನಟೇಶ್ ಅವರಿಗೆ 90 ಪುಟಗಳ ವರದಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವರದಿಯಲ್ಲಿ ಡಿ.ಕೆ. ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ನಿರ್ಧಾರಕ್ಕೆ ಬಂದಿರುವುದಾಗಿ ವರದಿಯಾದ ಬಳಿಕ ಅವರ ತಾಯಿ ಗೌರಮ್ಮ, ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ತಮ್ಮ ಮಗನ ಸಾವಿಗೆ ಸಿ.ಬಿ.ಐ. ನಿಂದ ನ್ಯಾಯ ಸಿಕ್ಕಿಲ್ಲ ಎಂದು ಹೇಳಿದ್ದು, ಆತ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ದುರ್ಬಲನಾಗಿರಲಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ. ರವಿ ಅವರ ತಂದೆ ಕರಿಯಪ್ಪ ಮೌನಕ್ಕೆ ಜಾರಿದ್ದಾರೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿರುವ ಡಿ.ಕೆ. ರವಿ ಅವರ ಸಮಾಧಿಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಭದ್ರತೆ ಒದಗಿಸಲಾಗಿದೆ.
ಡಿ.ಕೆ.ರವಿ ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಯಾರೂ ಸಂಚು ರೂಪಿಸಿಲ್ಲ ಎಂದು ಸಿ.ಬಿ.ಐ. ಅಭಿಪ್ರಾಯಪಟ್ಟಿದ್ದು, ಇದಕ್ಕೆ ಹಾಸಿಗೆ ಹಿಡಿದಿರುವ ರವಿ ತಾಯಿ ಗೌರಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾರ್ಚ್ 16 2015 ರಂದು ಐಎಎಸ್ ಅಧಿಕಾರಿ ಡಿ.ಕೆ ರವಿ ತಮ್ಮ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.ಅನಂತರ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಪ್ರತಿಪಕ್ಷಗಲು ಕೂಡ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದವು.
ವೈಯಕ್ತಿಕ ಕಾರಣಗಳಿಂದಾಗಿಯೇ ಡಿ.ಕೆ ರವಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ಸಷ್ಪಪಡಿಸಿದೆ.
ಯಾವುದೇ ಒಂದು ಅಸ್ವಾಭಾವಿಕ ಸಾವಿನ ಪ್ರಕರಣದಲ್ಲಿ ತನಿಖೆ ಮುಗಿದ ನಂತರ ವರದಿಯನ್ನು ಮ್ಯಾಜಿಸ್ಟ್ರೇಟ್ ಗೆ ಸಲ್ಲಿಸುವುದು ವಾಡಿಕೆ. ಆದರೆ ಈ ಪ್ರಕರಣದಲ್ಲಿ ಅಸಿಸ್ಟೆಂಟ್ ಕಮಿಷನರ್ ಗೆ ವರದಿ ಸಲ್ಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
