fbpx
ಸಮಾಚಾರ

ಎಸ್​ಸಿ, ಎಸ್​ಟಿ ಬಡ್ತಿ; ರಾಜ್ಯ ಸರ್ಕಾರದ ಕಾಯ್ದೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್.

ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿಹಿಡಿದಿದ್ದು, ಈ ಮೂಲಕ ಹಲವಾರು ವರ್ಷಗಳಿಂದ ಬಡ್ತಿ ಮೀಸಲಾತಿಗಾಗಿ ಹೋರಾಟ ನಡೆಸಿದ್ದ ಈ ಸಮುದಾಯದ ನೌಕರರಿಗೆ ಜಯ ಸಿಕ್ಕಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಸೇವೆಯಲ್ಲಿರುವ ಎಸ್​ಸಿ ಎಸ್​ಟಿ ​ಅಧಿಕಾರಿಗಳಿಗೆ ಮಿಸಲಾತಿ ಆಧಾರದಲ್ಲಿ ಬಡ್ತಿ ನೀಡಬೇಕು ಎಂಬ ಹೊಸ ಕಾಯ್ದೆಯನ್ನು ಹೊರಡಿಸಿದ್ದರು. ಆದರೆ, ರಾಜ್ಯ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಬಿ.ಕೆ. ಪವಿತ್ರ ಎಂಬುವವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮೇಲ್ಮನವಿ ಕುರಿತು ಕಾಯ್ದಿರಿಸಿದ್ದ ತನ್ನ ತೀರ್ಪನ್ನು ವಿಭಾಗೀಯ ಪೀಠ ಇಂದು ಪ್ರಕಟಿಸಿದ್ದು, ಕಾಯ್ದೆ ಪ್ರಶ್ನಿಸಿದ್ದವರಿಗೆ ಹಿನ್ನೆಡೆ ಉಂಟಾಗಿದೆ.

ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜೇಷ್ಠತೆ ವಿಸ್ತರಿಸುವ ರಾಜ್ಯ ಸರ್ಕಾರದ ಕಾಯ್ದೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಹಾಗೂ ಡಿ.ವೈ. ಚಂದ್ರಚೂಡ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಮಹತ್ವದ ತೀರ್ಪನ್ನು ನೀಡಿದೆ.

ಏನಿದು ಬಡ್ತಿ ಮೀಸಲಾತಿ:
ಸರ್ಕಾರಿ ನೌಕರರ ಬಡ್ತಿಯಲ್ಲಿ ಮೀಸಲಾತಿ ವಿಧಾನ ಅನುಸರಿಸುವ ರಾಜ್ಯ ಸರ್ಕಾರದ 2002ರ ಕಾಯ್ದೆಯನ್ನು ರದ್ದುಪಡಿಸಿ ಸುಪ್ರೀಂ ಕೋರ್ಟ್‌ 2017ರ ಫೆಬ್ರುವರಿ 9ರಂದು ತೀರ್ಪು ನೀಡಿದ್ದ ಹಿನ್ನೆಲೆಯಲ್ಲಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಹೊಸ ಕಾಯ್ದೆ ರೂಪಿಸಿತ್ತು. ಈ ನೂತನ ಕಾಯ್ದೆಗೆ ರಾಷ್ಟ್ರಪತಿಯವರ ಅಂಕಿತ ದೊರೆತಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top