fbpx
ಸಮಾಚಾರ

ನಿರ್ಮಲಾನಂದ ಶ್ರೀಗಳ ಫೋನ್ ಕದ್ದಾಲಿಕೆ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದೇನು?

ಸಮ್ಮಿಶ್ರ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಫೋನ್ ಕದ್ದಾಲಿಕೆ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸುತ್ತಿದ್ದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

ಎಚ್‌ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಆದಿ ಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂಬ ವಿಚಾರ ಬಯಲಾಗಿದ್ದು ಈ ಕುರಿತಾಗಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಸಿಬಿಐ ತನಿಖೆ ಮುಂದುವರಿಸಿದ್ದು ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಅಲೋಕ್ ಕುಮಾರ್ ಸೇರಿದಂತೆ ಹಲವರನ್ನು ವಿಚಾರಣೆ ನಡೆಸಿದೆ.

 

 

ಈ ನಡುವೆ ರಾಜಕೀಯ ನಾಯಕರ ಹೇಳಿಕೆಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಆದಿ ಚುಂಚನಗಿರಿ ಸ್ವಾಮೀಜಿಯ ಫೋನ್ ಟ್ಯಾಪಿಂಗ್ ಕುರಿತ ವರದಿಗಳು ಮತ್ತು ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ‌ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

 

 

ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದ್ದರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದ್ದರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ ಎಂದು ಸಮರ್ಥನೆ ನೀಡಿದ್ದಾರೆ.

ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಸಚಿವ ಅಶೋಕ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರಕ್ಕೆ ಅತೀವ ನೋವಿದೆ ಎಂದು ಟ್ವೀಟ್ ನಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top