fbpx
ಸಮಾಚಾರ

ಸಿಎಂ ಯಡಿಯೂರಪ್ಪಗೆ ಸುದೀರ್ಘ ಪತ್ರ ಬರೆದ ಮಾಜಿ ಸಿಎಂ ಸಿದ್ದರಾಮಯ್ಯ- ಪತ್ರದಲ್ಲೇನಿದೆ?

ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್ ಹೆಸರು ಕಾಳಿಗೆ ರೂ.7,196 ಗಳನ್ನು ಕನಿಷ್ಠ ಬೆಂಬಲ ಬೆಲೆಯಾಗಿ ನಿಗಧಿಪಡಿಸಿರುವುದರಿಂದ ಇಂದಿನಿಂದಲೇ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರನ್ನು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುದೀರ್ಘ ಪತ್ರವನ್ನು ಸಿದ್ದರಾಮಯ್ಯ ಬರೆದಿದ್ದಾರೆ.

 

 

ಪತ್ರದಲ್ಲಿ ಇರುವುದಿಷ್ಟು…
ಹೆಸರು ಮತ್ತು ಉದ್ದು ಬೆಳೆಯನ್ನು ತುಮಕೂರು ಸೇರಿದಂತೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ಪ್ರಸ್ತುತ ವಿವಿಧ ಎ.ಪಿ.ಎಂ.ಸಿ.ಗಳಲ್ಲಿ ಹೆಸರುಕಾಳು ಕ್ವಿಂಟಲ್‍ಗೆ 2,105 ರೂಪಾಯಿಗಳಿಗೆ ಮಾರಾಟವಾಗುತ್ತಿದೆ. ಎಲ್ಲಾ ಮಾರುಕಟ್ಟೆಗಳ ಇಂದಿನ ಸರಾಸರಿ ಬೆಲೆ 5 ಸಾವಿರ ರೂಪಾಯಿಗಳ ಆಸುಪಾಸಿನಲ್ಲಿದೆ.

ಹೆಸರನ್ನು ಕೊಯ್ಲು ಮಾಡಿ ಬಹಳ ದಿನಗಳ ಕಾಲ ರೈತರು ಮನೆಗಳಲ್ಲಿ ದಾಸ್ತಾನು ಮಾಡಲಾಗುವುದಿಲ್ಲ. ಹುಳದ ಕಾಟ ಮುಂತಾದ ಸಮಸ್ಯೆಗಳು ಶುರುವಾಗುತ್ತವೆ. ಹಾಗಾಗಿ ರೈತರು ಅಡ್ಡಾದಿಡ್ಡಿ ಬೆಲೆಗಳಿಗೆ ಮಾರಿ ಕೊಳ್ಳುತ್ತಿದ್ದಾರೆ.

ಸರ್ಕಾರ ಈವರೆಗೂ ಸಹ ಖರೀದಿ ಕೇಂದ್ರಗಳನ್ನು ತೆರೆಯದೇ ನಿರ್ಲಕ್ಷ್ಯ ಮಾಡುತ್ತಿರುವುದು ರೈತ ವಿರೋಧಿ ನಿಲುವಾಗಿದೆ. ಇಂತಹ ಸಂದರ್ಭದಲ್ಲಿ ಎ.ಪಿ.ಎಂ.ಸಿ. ಕಾಯ್ದೆಯನ್ನು ತಿದ್ದುಪಡಿ ಮಾಡಿ ಎ.ಪಿ.ಎಂ.ಸಿ.ಗಳನ್ನೇ ಬರ್ಖಾಸ್ತು ಮಾಡಲು ಹೊರಟಿದೆ. ಕಳೆದ ಬಾರಿ ಸಹ ತೊಗರಿ ಖರೀದಿಯಲ್ಲೂ ಸರ್ಕಾರ ರೈತರಿಗೆ ಮೋಸ ಮಾಡಿತು.

ಕೇಂದ್ರ ರಾಜ್ಯ ಎರಡೂ ಕಡೆ ಒಂದೇ ಪಕ್ಷದ ಆಡಳಿತವಿದೆ. ರಾಜ್ಯದ ಜನರು 25 ಜನ ಬಿ.ಜೆ.ಪಿ. ಪಕ್ಷದ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಆದರೆ ಒಬ್ಬರೂ ಸಹ ರೈತರ ಸಂಕಷ್ಟಕ್ಕೆ ಸ್ಪಂದಿಸದೇ ಸಂಪೂರ್ಣ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ. ಈ ನಿರ್ಲಕ್ಷ್ಯ ಧೋರಣೆಯನ್ನು ಬಿಟ್ಟು ಸರ್ಕಾರ ಇಂದಿನಿಂದಲೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ ಹೆಸರು ಕಾಳನ್ನು ನಿಗಧಿಪಡಿಸಿದ ಕನಿಷ್ಠ ಬೆಂಬಲ ಬೆಲೆಯನ್ನು ನೀಡಿ ಖರೀದಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top