fbpx
ಸಮಾಚಾರ

ಕರ್ನಾಟಕದ ಮಾಜಿ ಸಚಿವ ಕೊರೋನಾಗೆ ಬಲಿ: ಸಿಎಂ ಬಿಎಸ್‌ವೈ ತೀವ್ರ ಸಂತಾಪ

ಮಾಜಿ ಸಚಿವ ಕೆ. ಬಿ.ಶಾಣಪ್ಪ ಕೋವಿಡ್-19 ಸೋಂಕಿನಿಂದ ನೆನ್ನೆ ಮೃತಪಟ್ಟಿದ್ದಾರೆ. ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು.

ನಾಲ್ಕು ದಿನಗಳ ಹಿಂದೆ ಕೋವಿಡ್ ದೃಢಪಟ್ಟಿದ್ದರಿಂದ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರು ಇದ್ದಾರೆ. ಸೋಮವಾರ (ಮೇ 10) ಬೆಳಿಗ್ಗೆ 10ಕ್ಕೆ ಸ್ವಗ್ರಾಮ ರಾವೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಬಿಎಸ್‌ವೈ ಸಂತಾಪ
ಮಾಜಿ ಸಚಿವ ಕೆ.ಬಿ.ಶಾಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ನಾಯಕರಾಗಿ, ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು, ಸದನದಲ್ಲಿ ಸದಾ ನೊಂದ ಜನರ ದನಿಯಾಗಿದ್ದರು.

ಅವರ ನಿಧನದಿಂದ ಒಬ್ಬ ನೇರ ನಿಷ್ಠುರ ಸ್ವಭಾವದ ನಾಯಕರನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಜೆ.ಎಚ್‌.ಪಟೇಲ್‌ ಅವರ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದ ಅವರು 1996ರಲ್ಲಿ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದರು. ನಂತರ ಬಿಜೆಪಿಗೆ ಸೇರಿದ ಅವರು 2006ರಲ್ಲಿ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾದರು. 2012ರಲ್ಲಿ ಮತ್ತೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದರು. 2019ರಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top