fbpx
ಸಮಾಚಾರ

‘ಭಿನ್ನಾಭಿಪ್ರಾಯಗಳನ್ನು ಟೂಲ್ಕಿಟ್ ಎಂದು ರಾಜಕೀಯಗೊಳಿಸುತ್ತಿರುವುದು ನಾಡಿಗೆ ಕೇಡಿನ ಲಕ್ಷಣ’ ದಲಿತ ಸಾಹಿತಿ ದೇವನೂರು ಮಹಾದೇವ ಕಿಡಿ

ಖ್ಯಾತ ಸಾಹಿತಿ ದೇವನೂರು ಮಹದೇವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ‘ಪರಿಷ್ಕೃತ ಪಠ್ಯಪುಸ್ತಕದ ಬಗೆಗಿನ ಭಿನ್ನಾಭಿಪ್ರಾಯಗಳನ್ನು ಟೂಲ್‌ಕಿಟ್ ಎಂದು ರಾಜಕೀಯಗೊಳಿಸಿ ಪರಾರಿಯಾಗಲು ನೋಡುವುದು ಹಾಗೂ ನಾಡಿನ ಗಣ್ಯರು, ಮಠಾಧಿಪತಿಗಳು, ಲೇಖಕರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನ ಪಠ್ಯವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ಅದನ್ನು ಕಾಲುಕಸ ಮಾಡಿ ಲೆಕ್ಕಿಸದೇ ಇರುವುದನ್ನು ನೋಡಿದರೆ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನಿಸುತ್ತವೆ’ ಎಂದು ಸಾಹಿತಿ ದೇವನೂರ ಮಹಾದೇವ ಹೇಳಿದ್ದಾರೆ.

ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿರುವ ತಮ್ಮ ಪಠ್ಯವನ್ನು ಕೈಬಿಡಬೇಕು ಎಂದು ಈ ಹಿಂದೆ ಒಂದು ಪತ್ರ ಬರೆದಿದ್ದ ದೇವನೂರು ಮಹಾದೇವ ಅವರು, ನಂತರ ನಡೆದ ಶಿಕ್ಷಣ ಇಲಾಖೆಯ ಬೆಳವಣಿಗೆಗಳು ಮತ್ತು ಶಿಕ್ಷಣ ಸಚಿವರ ಹೇಳಿಕೆಗಳನ್ನು ಗಮನಿಸಿ, ಅದರಿಂದ ಬೇಸತ್ತು ಗುರುವಾರ ಮತ್ತೊಂದು ಪತ್ರವನ್ನು ಬರೆದಿದ್ದಾರೆ. ಪತ್ರದ ಸಾರಾಂಶ ಹೀಗಿದೆ..

 

 

ಪತ್ರದಲ್ಲಿ ಏನಿದೆ?
ಈ ಹಿಂದೆ 10ನೇ ತರಗತಿಯ ಪಠ್ಯ ಪುಸ್ತಕದಲ್ಲಿರುವ ನನ್ನ ಪಠ್ಯವನ್ನು ಕೈ ಬಿಡಬೇಕೆಂದು ತಮಗೆ ವಿನಂತಿಸಿ ಮೇ 26ರಂದು ಪತ್ರ ಬರೆದು ಕೊರಿಯರ್ ಮುಖಾಂತರ ರವಾನಿಸಿದ್ದೆ. ಅದನ್ನು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವಗೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೂ ಬರೆದು ಕೊರಿಯರ್ ಮಾಡಿದ್ದೆ. ಆ ಪತ್ರದಲ್ಲಿ ನಾನು ಒಪ್ಪಿಗೆ ಇಲ್ಲದಿರುವುದಕ್ಕೆ ಸ್ಪಷ್ಟನೆ ನೀಡಿದ್ದೇನೆ. ಹೀಗಿದ್ದೂ ನನ್ನ ಮನವಿಯನ್ನು ತಾವು ಪರಿಗಣಿಸದೇ, ಇತ್ತೀಚಿನ ತಮ್ಮ ಹೇಳಿಕೆಯಲ್ಲಿ ಪರಿಷ್ಕೃತ ಮುದ್ರಣವೇ ಜಾರಿಗೆ ಬರುತ್ತದೆ ಎಂದಿದ್ದೀರಿ. ಕ್ಷಮಿಸಿ, ನಿಮ್ಮ ಈ ಧೋರಣೆ ನನಗೆ ದಬ್ಬಾಳಿಕೆ ಅನ್ನಿಸಿಬಿಟ್ಟಿತು.

ಮತ್ತೂ ಹೇಳಬೇಕೆಂದರೆ, ಚಾತುವರ್ಣ ವಿರೋಧಿ ಬಸವಣ್ಣನವರ ಪಾಠವನ್ನು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಕತ್ತು ಹಿಸುಕಿರುವುದು, ಕುವೆಂಪು, ಅಂಬೇಡ್ಕರ್ ಅವರನ್ನು ಗೇಲಿ ಮಾಡುವ ಮನಸ್ಥಿತಿಯ ವ್ಯಕ್ತಿಯನ್ನೇ ಪಠ್ಯಪುಸ್ತಕ ಪರಿಷ್ಕರಣೆಗೆ ಅಧ್ಯಕ್ಷನನ್ನಾಗಿಸಿರುವುದು, ಒಂದು ಒಕ್ಕೂಟ ಸರ್ಕಾರದಲ್ಲಿ ಆ ಒಕ್ಕೂಟದ ಅಂಗವಾಗಿರುವ ಕರ್ನಾಟಕ ರಾಜ್ಯವು ತನಗೂ ಒಂದು ಧ್ವಜವೂ ಬೇಕು ಎಂದು ದನಿ ಎತ್ತಿದ ಸಂದರ್ಭದಲ್ಲಿ ಆ ಪರಿಕಲ್ಪನೆಯನ್ನು ತನ್ನ ಲಂಗೋಟಿಗೆ ಹೋಲಿಕೆ ಮಾಡಿದ ಹೀನ ಅಭಿರುಚಿಯ ವ್ಯಕ್ತಿಯನ್ನು ಮಕ್ಕಳ ಪಠ್ಯ ಪರಿಷ್ಕರಣೆ ಮಾಡಲು ಅಧ್ಯಕ್ಷನನ್ನಾಗಿಸಿರುವುದು ಮತ್ತು ಸಮರ್ಥಿಸುತ್ತಿರುವುದು ಅಸಮಾಧಾನ ತಂದಿದೆ.

ಭಿನ್ನಾಭಿಪ್ರಾಯಗಳನ್ನು ಟೂಲ್‌ಕಿಟ್ ಎಂದು ರಾಜಕೀಯಗೊಳಿಸಿ ಪರಾರಿಯಾಗಲು ನೋಡುವುದು ಇವೆಲ್ಲ ಹಾಗೂ ನಾಡಿನ ಗಣ್ಯರು, ಮಠಾಧಿಪತಿಗಳು, ಲೇಖಕರು, ಪ್ರಜ್ಞಾವಂತರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನ ಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲು ಕಸ ಮಾಡಿ, ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನ್ನಿಸುತ್ತದೆ.

ಕೊನೆಯದಾಗಿ ತಮ್ಮಲ್ಲಿ ಒಂದು ವಿನಂತಿ – ಇದು ಮುಂದುವರಿಯಬಾರದು, ದಯವಿಟ್ಟು ಮುಂದುವರಿಯಬಾರದು ಎಂದು ಕೋರಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top