fbpx
ಸಮಾಚಾರ

ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣಗಳಿಗೆ ಅಧಿಕೃತ ಎಂಟ್ರಿ ಕೊಟ್ಟ ಪುನೀತ್ ಪತ್ನಿ ಅಶ್ವಿನಿ

ನಟ ಪುನೀತ್ ರಾಜ್‌ಕುಮಾರ್ ನಿಧನದ ಬಳಿಕ ತೀವ್ರ ಆಘಾತದಲ್ಲಿರುವ ಅಶ್ವಿನಿ ಅವರು ಮೊದಲ ಬಾರಿಗೆ ಅಧಿಕೃತವಾಗಿ ಸಾಮಾಜಿಕ ಜಾಲತಾಣ ಪ್ರವೇಶಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪುನೀತ್ ಅಭಿಮಾನಿಗಳೊಂದಿಗೆ ಸಂಪರ್ಕ ಸಾಧಿಸಲು ತಮ್ಮ ಯೋಜನೆ, ಆಲೋಚನೆಗಳನ್ನು ಹಂಚಿಕೊಳ್ಳಲು ಸಾಮಾಜಿಕ ಜಾಲತಾಣ ವೇದಿಕೆಯನ್ನು ಬಳಸಿಕೊಳ್ಳಲಿದ್ದಾರೆ. ನಿನ್ನೆಯಷ್ಟೆ ಸಾಮಾಜಿಕ ಜಾಲತಾಣಕ್ಕೆ ಕಾಲಿಟ್ಟಿರುವ ಅಶ್ವಿನಿ ಮೊದಲ ದಿನವೇ ಅಭಿಮಾನಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ.

 

 

ಅಭಿಮಾನಿ ದೇವರುಗಳಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಪತ್ರ
‘’ಶ್ರೀ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ನಿಷ್ಕಲ್ಮಶ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು ‘ಪವರ್ ಸ್ಟಾರ್’ ಆಗಿ ರೂಪಿಸಿದ್ದ ನಿಮ್ಮೆಲ್ಲರಿಗೆ ಅವರ ವಿದಾಯ ತಂದಿತ್ತ ದುಃಖ ಎಷ್ಟಿರಬಹುದೆಂದು ಊಹಿಸಲು ಸಾಧ್ಯವಿಲ್ಲ. ಆದರೂ ಇಂತಹ ಸಂದರ್ಭದಲ್ಲಿ ನೀವುಗಳು ಎಲ್ಲಿಯೂ ಸಂಯಮ ಕಳೆದುಕೊಳ್ಳದೇ, ಅಹಿತಕರ ಘಟನೆಗಳು ನಡೆಯಲು ಬಿಡದೇ ಅವರಿಗೊಂದು ಅತ್ಯಂತ ಗೌರವಯುವ ಬೀಳ್ಕೊಡುಗೆ ನೀಡುವಲ್ಲಿ ಸಹಕರಿಸಿದ್ದಿರಿ. ಸಿನಿಮಾ ಪ್ರೇಮಿಗಳಷ್ಟೇ ಅಲ್ಲದೇ, ವಯೋಮಾನದ ಮಿತಿಯಿಲ್ಲದೇ, ದೇಶ ವಿದೇಶಗಳಿಂದ ಕೋಟ್ಯಂತರ ಜನರು ಸಂತಾಪ ಸೂಚಿಸುವುದನ್ನು ಕಂಡಾಗ ಮನಸ್ಸು ಭಾರವಾಗುತ್ತದೆ. ನಿಮ್ಮ ಪ್ರೀತಿಯ ಅಪ್ಪು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಾ ಸಾವಿರಾರು ಸಂಖ್ಯೆಯಲ್ಲಿ ನೇತ್ರದಾನಕ್ಕೆ ನೋಂದಣಿ ಮಾಡಿಸುವುದನ್ನು ನೋಡಿದಾಗ ಕಣ್ತುಂಬಿ ಬರುತ್ತದೆ. ಅವರನ್ನು ಆದರ್ಶವಾಗಿಟ್ಟುಕೊಂಡು ನೀವುಗಳು ಮಾಡುವ ಸತ್ಕಾರ್ಯಗಳಲ್ಲಿ, ಅವರ ನೆನಪುಗಳು ನಿಮ್ಮಲ್ಲಿ ಮೂಡಿಸುವ ಉತ್ಸಾಹದಲ್ಲಿ ಅವರೆಂದಿಗೂ ಜೀವಂತವಾಗಿರುತ್ತಾರೆ. ವಿಶ್ವದಾದ್ಯಂತ ನಮ್ಮ ಶೋಕವನ್ನು ಹಂಚಿಕೊಂಡು ಬೆಂಬಲಕ್ಕೆ ನಿಂತ ಎಲ್ಲಾ ಸಹೃದಯಿ ಅಭಿಮಾನಿ ದೇವರುಗಳು ಮತ್ತು ಸಾರ್ವಜನಿಕರಿಗೆ ನಮ್ಮ ಇಡೀ ಕುಟುಂಬದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು’’ ಎಂದು ಪತ್ರದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಉಲ್ಲೇಖಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top